ಯಾದಗಿರಿ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಗುರಮಿಟ್ಕಲ್ ಶಾಸಕರಾದ ಶರಣಗೌಡ ಕಂದಕೂರು ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಅವರಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ, ಶಾಸಕರು ಗ್ಯಾರಂಟಿ ಯೋಜನೆಗಳ ಸಮಿತಿ ಜಿಲ್ಲಾಧ್ಯಕ್ಷರಾದ ಶ್ರೇಣಿಕುಮಾರ ದೋಖಾ ಮತ್ತು ಸದಸ್ಯರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಸಮಿತಿಯ ಸದಸ್ಯರು ಅಧಿಕಾರಿಗಳ ಜೊತೆ ಸಂಬಂಧವಿಲ್ಲದ ವಿಷಯಗಳನ್ನು ಚರ್ಚಿಸುತ್ತಾರೆ ಮತ್ತು ಅಧಿಕಾರಿಗಳ ಮೇಲೆ ದೌರ್ಜನ್ಯ ಮತ್ತು ಬ್ಲಾಕ್‌ಮೇಯ್ಲ್‌ಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕುರಿತು ಅಧಿಕಾರಿಗಳು ತಮ್ಮ ಬಳಿ ಮೌಖಿಕವಾಗಿ ದೂರು ನೀಡಿದ್ದಾರೆ ಎಂದು ಶಾಸಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಪ್ರಗತಿ ಕುರಿತು ಚರ್ಚಿಸುವ ಬದಲು, ಸಮಿತಿಯ ಸದಸ್ಯರು ಅಧಿಕಾರಿಗಳನ್ನು ಬೆದರಿಸುವುದು, ಅಪಮಾನಿಸುವುದು, ಮತ್ತು ಬ್ಲಾಕ್‌ಮೇಯ್ಲ್ ಮಾಡುವುದರಲ್ಲಿ ತೊಡಗಿದ್ದಾರೆ ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.
ಸಮಿತಿಯ ಸದಸ್ಯರು ಕೂಡಲೇ ತಮ್ಮ ಕರ್ತವ್ಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಬೇಕು ಎಂದು ಶಾಸಕರು ಸಿಇಒ ಅವರನ್ನು ಆಗ್ರಹಿಸಿದ್ದಾರೆ. ಈ ದೂರ ಪತ್ರವು ಜಿಲ್ಲಾಡಳಿತದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸಿಇಒ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

