ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಸೆಪ್ಟೆಂಬರ್ 27ರಂದು ಸ್ವಯಂಪ್ರೇರಿತ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದೆ.
ಕಳೆದ ಎರಡು ತಿಂಗಳಿಂದ ಉಪನ್ಯಾಸಕರ ಕೊರತೆಯಿಂದಾಗಿ ರಾಜ್ಯದ ಸಾವಿರಾರು ಸರ್ಕಾರಿ ಪದವಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ ಎಂದು AIDSO ಹೇಳಿಕೆಯಲ್ಲಿ ತಿಳಿಸಿದೆ. ಪಾಠ-ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ. ಇದರ ಪರಿಣಾಮವಾಗಿ, ಬಡ ಮತ್ತು ಗ್ರಾಮೀಣ ಹಿನ್ನಲೆಯ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಖಾಸಗಿ ಕಾಲೇಜುಗಳಲ್ಲಿ ಈಗಾಗಲೇ ಪಠ್ಯಕ್ರಮ ಮತ್ತು ಪರೀಕ್ಷೆಗಳು ಮುಗಿದಿದ್ದು, ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಹಿಂದುಳಿದಿದ್ದಾರೆ.
ಈ ಕುರಿತು ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು AIDSO ದೂರಿದೆ. ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ಪರಿಗಣಿಸುವುದು ಸರಿಯಲ್ಲ ಎಂದು ಸಂಸ್ಥೆ ಖಂಡಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಯುಜಿಸಿ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಲ್ಲ. ಸರ್ಕಾರವು ಬಯಸಿದರೆ ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬಹುದು. ಆದರೆ, ಅದು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು AIDSO ಆರೋಪಿಸಿದೆ.
ಕಳೆದ ಕೆಲವು ವಾರಗಳಿಂದ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 5,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗಾಗಲೇ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯ ಮುಂದುವರಿದ ಕಾರಣ, ತಮ್ಮ ಶಿಕ್ಷಣದ ಹಕ್ಕನ್ನು ರಕ್ಷಿಸಿಕೊಳ್ಳಲು ವಿದ್ಯಾರ್ಥಿಗಳು ಈ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ತಮ್ಮ ಭವಿಷ್ಯದ ಬಗ್ಗೆ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಲು ತರಗತಿ ಬಹಿಷ್ಕಾರದಂತಹ ಕ್ರಮಕ್ಕೆ ಮುಂದಾಗಿದ್ದಾರೆ.
ಖಾಸಗಿ ಮತ್ತು ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ನಡುವೆ ಅಸಮಾನತೆ ಸೃಷ್ಟಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆಯನ್ನು AIDSO ತೀವ್ರವಾಗಿ ಖಂಡಿಸಿದೆ.

