ಸರಕಾರದಿಂದ ಮಹತ್ವದ ನಿರ್ಧಾರಗಳು: ಕುವೆಂಪುಗೆ ಭಾರತರತ್ನ, ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ
ಬೆಂಗಳೂರು: ರಾಜ್ಯ ಸಚಿವ ಸಂಪುಟವು ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ರಾಷ್ಟ್ರಕವಿ ಕುವೆಂಪು ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಣಯಿಸಲಾಗಿದೆ. ಇದರ ಜೊತೆಗೆ, ಕನ್ನಡ ಚಿತ್ರರಂಗದ ದಿಗ್ಗಜರಾದ ನಟ ಡಾ. ವಿಷ್ಣುವರ್ಧನ್ ಮತ್ತು ನಟಿ ಬಿ. ಸರೋಜಾದೇವಿ ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಗೆ ಪರಿಹಾರ ಕುರಿತು ನಿರ್ಣಯ
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಳಿಗೆ ಅಗತ್ಯವಿರುವ ಭೂಮಿ ಸ್ವಾಧೀನ ಮತ್ತು ಪರಿಹಾರದ ಕುರಿತು ಅಂತಿಮ ನಿರ್ಣಯ ಕೈಗೊಳ್ಳಲು ಸೆಪ್ಟೆಂಬರ್ 16 ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಸಲಾಗುವುದು ಎಂದು ಸಚಿವರು ಹೇಳಿದರು. ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಏಕರೂಪದ ದರ ನಿಗದಿಪಡಿಸುವ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.
ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ
ರಾಜ್ಯದ ವಿವಿಧ ಇಲಾಖೆಗಳಲ್ಲಿ ಮತ್ತು ನಿಗಮ/ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಲಕ್ಷಾಂತರ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವ ಕುರಿತು ಅಧ್ಯಯನ ಮಾಡಲು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ. ಕಾರ್ಮಿಕರ ಶೋಷಣೆ ತಪ್ಪಿಸಲು ಮತ್ತು ಅವರ ಹಿತರಕ್ಷಣೆಗಾಗಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲು ಈ ಸಮಿತಿ ಶಿಫಾರಸುಗಳನ್ನು ಸಲ್ಲಿಸಲಿದೆ.

